ನಟ ಬ್ಯಾಂಕ್ ಜನಾರ್ಧನ್ ವಿಧಿವಶ

khushihost
ನಟ ಬ್ಯಾಂಕ್ ಜನಾರ್ಧನ್ ವಿಧಿವಶ

ಬೆಂಗಳೂರು : ಹಲವು ದಿನಗಳಿಂದ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ನಿಧನರಾಗಿದ್ದಾರೆ. ಅವರಿಗೆ 76 ವರುಷವಾಗಿತ್ತು.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬ್ಯಾಂಕ್ ಜನಾರ್ಧನ್ ಅವರು ಕೊನೆಯುಸಿರೆಳೆದಿದ್ದಾರೆ.

1948ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ಬ್ಯಾಂಕ್ ಜನಾರ್ಧನ್ ತಮ್ಮ ಅದ್ಭುತ ನಟನೆಯ ಮೂಲಕ ಅಪಾರ ಜನಮನ್ನಣೆಗಳಿಸಿದ್ದರು. 1991ರಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದ ಅವರು, ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ ಖ್ಯಾತಿ ಗಳಿಸಿದ್ದರು.

ಉಪೇಂದ್ರ ನಿರ್ದೇಶನದ ‘ಶ್’, ‘ತರ್ಲೆ ನನ್ ಮಗ’, ‘ಕೌರವ’ ಸೇರಿದಂತೆ ಹಲವು ಜನಪ್ರಿಯ ಸಿನಿಮಾಗಳಲ್ಲಿ ದಿವಂಗತರು ನಟಿಸಿದ್ದಾರೆ. ಸಿನಿಮಾ ಮಾತ್ರವಲ್ಲದೇ ಕಿರುತೆರೆ ಮತ್ತು ರಂಗಭೂಮಿಯಲ್ಲಿಯೂ ಅವರು ತೊಡಗಿಸಿಕೊಂಡಿದ್ದರು.

ಬ್ಯಾಂಕ್ ಜನಾರ್ದನ್ ನಿಧನಕ್ಕೆ ಚಿತ್ರರಂಗ ಕಂಬನಿ ಮಿಡಿದಿದೆ. ಇಂದು ಸಂಜೆ ವೇಳೆಗೆ ಅಂತ್ಯ ಸಂಸ್ಕಾರ ನೆರವೇರಲಿದೆ.

Share This Article